ಡಿ.ಕೆ.ಆರ್. ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ
ಬೆಳ್ತಂಗಡಿ: ಕ್ಯಾನ್ಸರ್ ಎಂದರೆ ಸಾವಲ್ಲ, ಉತ್ತಮ ಚಿಕಿತ್ಸೆ, ಜೀವನ ಶೈಲಿಯ ಬದಲಾವಣೆ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಿದಾಗ ಕ್ಯಾನ್ಸರ್ ರೋಗವನ್ನು ನಿವಾರಿಸಬಹುದು ಎಂದು ಬಿಳಿನೆಲೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶಾರದಾ ದಿನೇಶ್ ಅಭಿಪ್ರಾಯಪಟ್ಟರು.
ಅವರು ಫೆ 15 ರಂದು ಡಿ.ಕೆ.ಆರ್. ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ, ಕಾರಿತಾಸ್ ಇಂಡಿಯಾ ನವದೆಹಲಿ-ಸ್ಪರ್ಶ ಕಾರ್ಯಕ್ರಮ, ಗ್ರಾಮ ಪಂಚಾಯತ್ ಬಿಳಿನೆಲೆ ಹಾಗೂ ಉಪ ಆರೋಗ್ಯ ಕೇಂದ್ರ ಬಿಳಿನೆಲೆ ಇವುಗಳ ಆಶ್ರಯದಲ್ಲಿ ಕಡಬ ತಾಲೂಕಿನ ನೆಟ್ಟಣ ಪೇಟೆಯಲ್ಲಿ ನಡೆದ ಕ್ಯಾನ್ಸರ್ ರೋಗದ ವಿರುದ್ಧದ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಿಳಿನೆಲೆ ಉಪ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಮಾಲತಿ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ನೀಡಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾಗಿರುವ ವಂದನೀಯ ಫಾ. ಬಿನೋಯಿ ಎ. ಜೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಮೂಲಕ ನಡೆಸಲ್ಪಡುವ ಸ್ಪರ್ಶ- ಕ್ಯಾನ್ಸರ್ ರೋಗದ ವಿರುದ್ಧ ನಡೆಸುವ ಅಭಿಯಾನದ ಬಗ್ಗೆ ವಿವರಿಸಿದರು.
ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿವಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶುಭ ಹಾರೈಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸ್ಪರ್ಶ ಕಾರ್ಯಕ್ರಮದ ಸಂಯೋಜಕ ಸುನಿಲ್ ಗೊನ್ಸಾಲ್ವಿಸ್ ಸ್ವಾಗತಿಸಿ, ಕಿರಣ್ ಮಹಿಳಾ ತಾಲೂಕು ಒಕ್ಕೂಟದ (ರಿ) ಕಡಬ ಇದರ ಜೊತೆ ಕಾರ್ಯದರ್ಶಿ ಶ್ರೀಮತಿ ಸಂಧ್ಯಾ ಪತ್ರೋಸ್ ಧನ್ಯವಾದವಿತ್ತರು. ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜಾರವರು ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕರ್ತೆ ಸುಶೀಲಾ ಕೆ.ಜಿ. ಸಹಕರಿಸಿದರು. ಸಭಾ ಕಾರ್ಯಕ್ರಮದ ಬಳಿಕ ನೆಟ್ಟಣ ಹಾಗೂ ಬಿಳಿನೆಲೆ ಪೇಟೆಗಳಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಮೈಕ್ ಉದ್ಘೋಷಣೆ ಮಾಡಿ ಸಾರ್ವಜನಿಕರಿಗೆ ಕರಪತ್ರ ವಿತರಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್ ರೋಗ ಪೀಡಿತ ವ್ಯಕ್ತಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಹಾಗೂ ಅಂಗಡಿ ಮುಂಗಟ್ಟುಗಳ ವರ್ತಕರಿಂದ ಧನ ಸಹಾಯ ಸಂಗ್ರಹಣೆ ಮಾಡಲಾಯಿತು. ಕೇರಳ ಪಿಲತ್ತರದ ಸಂತ ಜೋಸೆಫ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.